ಮಾ.21ರಂದು ಮಂಗಳೂರಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ-ಡಾ.ಎಂ.ಮೋಹನ ಆಳ್ವ

109K Views 13 Mar 2026

ಮಂಗಳೂರು : ಆಳ್ವಾಸ್ ನುಡಿಸಿರಿ- ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕಲಾವಿದರಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ.21ರಂದು ಸಾಯಂಕಾಲ 6ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ. ನಮ್ಮ ಸಾಂಸ್ಕೃತಿಕ, ಜನಪದ ಹಾಗೂ ಶಾಸ್ತ್ರೀಯ ಕಲೆಗಳನ್ನು
ಜನಮಾನಸಕ್ಕೆ ತಲುಪಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.
ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಸಲಾಗಿದ್ದು, ಅಪಾರ ಜನಮನ್ನಣೆ ಗಳಿಸಿದೆ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 3 ಸಾವಿರ ಮಕ್ಕಳಿಗೆ ಉಚಿತ ಶಿಕ್ಷಣದ ಜತೆಗೆ ನುಡಿಸಿರಿ, ವಿರಾಸತ್‌ನಂತಹ ಕಾರ್ಯಕ್ರಮಗಳ ಮೂಲಕ ನಮ್ಮ ನಾಡು,ನುಡಿ,ಕ್ರೀಡೆ ಹಾಗೂ ಕಲೆಗಳ
ಪೋಷಣೆಗೆ ಶ್ರಮಿಸುತ್ತಿದೆ. ನಮ್ಮ ಶಾಸ್ತ್ರೀಯ, ಜನಪದ ಕಲೆಗಳು ಮರೆಯಾಗದಂತೆ ವಿದ್ಯಾರ್ಥಿಗಳಿಗೆ ಶಿಕ್ಷಣ ಜತೆಗೆ ಸಾಂಸ್ಕೃತಿಕ ಶಿಕ್ಷಣ ನೀಡುವುದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಉದ್ದೇಶವಾಗಿದೆ. ಮಂಗಳೂರಿನಲ್ಲಿ ನಡೆಯಲಿರುವ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ಸಮಾನ ಮನಸ್ಕರು ಕೈಜೋಡಿಸಬೇಕು ಎಂದು ಡಾ.ಎಂ.ಮೋಹನ್ ಆಳ್ವ ವಿನಂತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್ ಮಾತನಾಡಿ ತಮ್ಮ ಹಿರಿಯರ ಆದರ್ಶದಲ್ಲಿ ನಡೆದು ಬಂದ ಡಾ.ಎಂ. ಮೋಹನ್ ಆಳ್ವರು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಎಂದು ಮರೆತವರಲ್ಲ. ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಂಡು ಕಲೆ, ಸಂಸ್ಕೃತಿಗೆ ಪ್ರೋತ್ಸಾಹ ನೀಡುತ್ತಿರುವ
ಡಾ.ಆಳ್ವ ಅವರು ಮೂಡುಬಿದಿರೆಯನ್ನು ಸಾಂಸ್ಕೃತಿಕ ಕೇಂದ್ರವಾಗಿಸಿ ಹೊಸ ಕ್ರಾಂತಿ ಮಾಡಿದ್ದಾರೆ ಎಂದರು.
ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಪ್ರಮುಖರಾದ ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ, ಪದ್ಮರಾಜ್ ಆರ್. ಪೂಜಾರಿ, ಡಾ.ಆಶಾ ಜ್ಯೋತಿ ರೈ, ಭಾಸ್ಕರ ರೈ ಕುಕ್ಕುವಳ್ಳಿ, ರತ್ನಾಕರ ಜೈನ್, ಲೀಲಾಕ್ಷ ಕರ್ಕೇರ, ಕದ್ರಿ ನವನೀತ ಶೆಟ್ಟಿ, ವಿದುಷಿ ರಾಜಶ್ರೀ ಉಳ್ಳಾಲ್, ಯುವಜನ ಕ್ರೀಡಾಧಿಕಾರಿ ಪ್ರದೀಪ್ ಡಿಸೋಜ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಆಳ್ವಾಸ್ ನುಡಿಸಿರಿ ವಿರಾಸತ್ ಮಂಗಳೂರು ಘಟಕದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ರೈ ಕಲ್ಲಿಮಾರ್, ಖಜಾಂಚಿ ಶಶಿರಾಜ್ ರಾವ್ ಕಾವೂರು ಉಪಸ್ಥಿತರಿದ್ದರು. ಉಪನ್ಯಾಸಕ ಡಾ.ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More News

Scroll to Top