ಮಂಗಳೂರು: ಮನೆ ನಿರ್ಮಿಸುವುದಕ್ಕೆ ಭೂಮಿಯ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಅಗತ್ಯ ಅನುಮತಿ ನೀಡುವುದಕ್ಕೆ 50 ಸಾವಿರ ರೂ. ಲಂಚ ಬೇಡಿಕೆ ಇರಿಸಿದ ಮಂಗಳೂರು ಗಣಿ ಇಲಾಖೆ ಉಪನಿರ್ದೇಶಕಿ ಮತ್ತು ಚಾಲಕ ಸಹಿತ ಇನ್ನೊಬ್ಬ ಸಿಬ್ಬಂದಿ ಮಂಗಳೂರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ, ಸಿಬ್ಬಂದಿ ಪ್ರದೀಪ್ ಹಾಗೂ ಉಪನಿರ್ದೇಶಕರ ಚಾಲಕ ಮಧು ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದವರು.

ವ್ಯಕ್ತಿಯೊಬ್ಬರು ತನ್ನ ಪರಿಚಯದವರ ಹೆಸರಿನಲ್ಲಿ ಇರುವ ಉಳ್ಳಾಲ ತಾಲೂಕು ಇರಾ ಗ್ರಾಮದ ಸರ್ವೆ ನಂಬ್ರ 279/5ರಲ್ಲಿ 1.39 ಎಕ್ರೆ ವಿಸ್ತೀರ್ಣದ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆಯನ್ನು ಕಟ್ಟಲು ಕಟ್ಟಡ ಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ಕೋರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಕಳೆದ ವರ್ಷ ಅ. 28ರಂದು ಅರ್ಜಿ ಸಲ್ಲಿಸಿದ್ದರು. ಉಳ್ಳಾಲ ತಹಶೀಲ್ದಾರರು ಜಮೀನಿನಲ್ಲಿ ಲಭ್ಯವಿರುವ ಕಟ್ಟಡ ಕಲ್ಲು ತೆಗೆಯಲು ಪ್ರಮಾಣ ಪತ್ರ/ದೃಢೀಕರಣ ಪತ್ರ ನೀಡಬಹುದು ಎಂದು 2025ರ ಮಾರ್ಚ್ 21ರಂದು ವರದಿ ಸಲ್ಲಿಸಿದ್ದರು. ಆದರೂ ಕೂಡ ಗಣಿ ಇಲಾಖೆಯಿಂದ ಅನುಮತಿ ನೀಡಿರಲಿಲ್ಲ.
ಈ ಬಗ್ಗೆ ವಿಚಾರಿಸಲು ದೂರುದಾರರು ಗಣಿ ಇಲಾಖೆ ಕಚೇರಿಗೆ ತೆರಳಿದ್ದು ಉಪನಿರ್ದೇಶಕಿ ಕೃಷ್ಣವೇಣಿ ಅವರು ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ಫೈಲಿಗೆ 50 ಸಾವಿರ ರೂ. ತೆಗೆದುಕೊಳ್ಳಿ. ಅನಂತರ ಸಹಿ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಬುಧವಾರ ಉಪನಿರ್ದೇಶಕಿ ಕೃಷ್ಣವೇಣಿ ಅವರು ಚಾಲಕ ಮಧು ಎಂಬವರ ಮೂಲಕ 50,000 ರೂ. ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪ್ರಭಾರ ಎಸ್.ಪಿ. ಕುಮಾರಚಂದ್ರ, ಡಿವೈಎಸ್‌ಪಿ ಡಾ| ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ಚಂದ್ರಶೇಖರ್ ಕೆ.ಎನ್. ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯ್ಕ ಮತ್ತಿತರರು ಭಾಗವಹಿಸಿದ್ದರು.






























































































































































































