ಮಂಗಳೂರು: ಸಂಘ, ಸಂಸ್ಥೆಗಳ ಕಾರ್ಯಚಟುವಟಿಕೆ ಹಾಗೂ ಸಾಧನೆಗಳ ದಾಖಲೀಕರಣ ಅಗತ್ಯ. ಇದರಿಂದ ಸಂಸ್ಥೆಯ ಸಾಧನೆಯನ್ನು ಪ್ರತಿಬಿಂಬಿಸಲು ಸಾಧ್ಯವಿದೆ ಎಂದು ದ.ಕ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ ಹೇಳಿದರು.
ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ “ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ” ಇದರ ೯ನೇ ಸಂಚಿಕೆಯನ್ನು ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತರಾತುರಿ ಹಾಗೂ ಪೈಪೋಟಿಯಿಂದ ಪ್ರಸಾರವಾಗುವ ಸುದ್ದಿಗಳಲ್ಲಿ ಸತ್ಯಾಸತ್ಯತೆ ಅರಿಯುವುದು ಕಷ್ಟಕರವಾಗುತ್ತಿದೆ. ಇಂತಹ ಕಾಲಘಟ್ಟದಲ್ಲಿ ಮಾನವೀಯ ಹಾಗೂ ನೈಜ ಸುದ್ದಿಗಳನ್ನು ಸಮಾಜಕ್ಕೆ ನೀಡುವ ಮಹತ್ವದ ಜವಾಬ್ದಾರಿ ಪತ್ರಿಕೆಗಳ ಮೇಲಿದೆ ಎಂದು ಅವರು ಹೇಳಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ಇಂದಾಜೆ ಉಪಸ್ಥಿತರಿದ್ದರು.
ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.







































































































































































































