ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೂತನ ಕಚೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎರಡನೇ ಮಹಡಿಯಲ್ಲಿ ಶುಕ್ರವಾರ ಶುಭಾರಂಭಗೊಂಡಿತು.
ಆರ್‌ಎಸ್‌ಎಸ್ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಚೇರಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ದೇವರ ಹಾಗೂ ಜನರ ಆಶೀರ್ವಾದದಿಂದ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಓರ್ವ ನಿವೃತ್ತ ಯೋಧ ಸಂಸದರಾಗಿ ಆಯ್ಕೆಯಾಗಿದ್ದಾರೆ. ಯೋಧ ರಾಷ್ಟ್ರದ ಒಳಿತಿಗಾಗಿ ಕೆಲಸ ಮಾಡಿದಂತೆ ಬ್ರಿಜೇಶ್ ಚೌಟ ಅವರು ಕ್ಷೇತ್ರದ ಅಭಿವೃದ್ಧಿಗೆ, ಜನರ ಕಷ್ಟ, ನೋವು, ದುಖಃಗಳ ಪರಿಹಾರಕ್ಕಾಗಿ ಕ್ಷೇತ್ರದ ಪ್ರತಿನಿಧಿಯಾಗಿ ಸಂಸತ್‌ನಲ್ಲಿ ಧ್ವನಿ ಎತ್ತಲಿದ್ದಾರೆ. ಎಲ್ಲರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ನೂತನ ಕಚೇರಿ ಕೆಲಸ ಮಾಡಲಿ. ಪ್ರಾಮಾಣಿಕವಾಗಿ ಯೋಧನ ಹಾಗೆ ಸಮರ್ಪಣಾ ಭಾವದಿಂದ ಬ್ರಿಜೇಶ್ ಚೌಟ ಅವರು ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
ಸಂಸದ ಬ್ರಿಜೇಶ್ ಚೌಟ ಮಾತನಾಡಿ, ನೂತನ ಕಚೇರಿ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗುವುದು. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ಒದಗಿಸುವ, ಅವಕಾಶ ಕಲ್ಪಿಸುವ ಕೆಲಸವನ್ನು ಪಕ್ಷ ಮಾಡಿಕೊಂಡು ಬಂದಿದೆ. ಅದನ್ನೇ ನಾನು ಮುಂದುವರೆಸುತ್ತೇನೆ. ಕಾರ್ಯಕರ್ತರ, ಹಿಂದುತ್ವದ ಧ್ವನಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಹಿಂದುತ್ವಕ್ಕೆ ಬದ್ದತೆ, ಅಭಿವೃದ್ಧಿಗೆ ಆದ್ಯತೆ ನೀಡಿ ನರೇಂದ್ರ ಮೋದಿ ಅವರ ವಿಕಸಿತ ಭಾರತಕ್ಕೆ ಪೂರಕವಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣಕ್ಕೆ ಎಲ್ಲರ ಸಹಕಾರ ಪಡೆದು ಕೆಲಸ ಮಾಡಲಾಗುವುದು ಎಂದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಕಳೆದ ಮೂರು ದಶಕಗಳಿಂದ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಸಂಸದರು ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಬ್ರಿಜೇಶ್ ಚೌಟ ಅವರೂ ನೂತನ ಕಚೇರಿ ಮೂಲಕ ಜಿಲ್ಲೆಯ ಜನತೆ, ಕಾರ್ಯಕರ್ತರ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸುವ ವಿಶ್ವಾಸವಿದೆ. ಕ್ರಿಯಾಶೀಲರಾಗಿರುವ ನೂತನ ಸಂಸದರಿಂದ ಜಿಲ್ಲೆಯ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯಲಿ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ನೂತನ ಕಚೇರಿ ಮೂಲಕ ಜಿಲ್ಲೆಯ ಜನರ ಕುಂದುಕೊರತೆಗೆ ಪರಿಹಾರ ದೊರೆಯಲಿ. ಇನ್ನಷ್ಟು ಒಂದಾಗಿ ಜಿಲ್ಲೆಯ ಅಭಿವೃದ್ಧಿಗೆ ನಾವೆಲ್ಲರೂ ಶ್ರಮಿಸಲಿದ್ದೇವೆ. ಬಿಜೆಪಿಯನ್ನು ಸಂಘಟಿತವಾಗಿ ಇನ್ನಷ್ಟು ಬಲಗೊಳಿಸಲು ಬದ್ದರಿದ್ದೇವೆ. ಇದಕ್ಕಾಗಿ ನೂತನ ಸಂಸದರಿಗೆ ಎಲ್ಲರ ಸಹಕಾರ ದೊರೆಯಲಿ ಎಂದು ಹೇಳಿದರು.
ಶಾಸಕ ಡಾ. ವೈ. ಭರತ್ ಶೆಟ್ಟಿ ಮಾತನಾಡಿ, ಜಿಲ್ಲೆಯ ಅವಕಾಶ ವಂಚಿತರಿಗೆ ಸೌಲಭ್ಯಗಳನ್ನು ಒದಗಿಸಿಕೊಡುವ ಮೂಲಕ ದ.ಕ. ಕ್ಷೇತ್ರದ ಯುವ ಸಂಸದರು ಯಶಸ್ವಿಯಾಗಿ ಕೆಲಸ ನಿರ್ವಹಿಸಲಿ. ಸಾರ್ವಜನಿಕರು ನೂತನ ಕಚೇರಿಯ ಸದುಪಯೋಗ ಪಡೆದುಕೊಳ್ಳಿ ಎಂದರು.
ಶಾಸಕರಾದ ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಪ್ರತಾಪ ಸಿಂಹ ನಾಯಕ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಮಾಜಿ ಶಾಸಕರಾದ ಯೋಗೀಶ್ ಭಟ್, ಮಲ್ಲಿಕಾ ಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಬಾಲಕೃಷ್ಣ ಭಟ್, ಮೋನಪ್ಪ ಭಂಡಾರಿ, ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಮೇಯರ್‌ಗಳಾದ ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಜಯಾನಂದ ಅಂಚನ್, ಪಕ್ಷದ ಪದಾಧಿಕಾರಿಗಳು, ಮನಪಾ ಸದಸ್ಯರು, ಕಾರ್ಯಕರ್ತರು ಶುಭ ಹಾರೈಸಿದರು.


























































































































































































